ಬೆಳಗಾವಿ:ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿ, ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಹೈಡ್ರಾಮಾವೇ ನಡೆದಿದೆ. ಸಿಎಂ ಭಾಷಣದ ಈ ವೇಳೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ,ಈ ಘಟನೆಯಿಂದ ಸಿದ್ಧರಾಮಯ್ಯ ಕೆಂಡಾಮಂಡಲದರಾದರು. ಸಿಎಂ ಸಿಟ್ಟು ಅಂತಿಮವಾಗಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ತಿರುಗಿ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಕೊನೆಗೆ ನಿಯಂತ್ರಣ ಕಳೆದುಕೊಂಡ ಸಿದ್ದರಾಮಯ್ಯ ಎಎಸ್ಪಿ ಮೇಲೆ ಕೈ ಮಾಡುವ ಪ್ರಯತ್ನವೂ ನಡೆಯಿತು.
ತನ್ನ ಭಾಷಣದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸಿ ಬಿರುಕು ಮೂಡಿಸುವ ಮೂಲಕ ಜನದ್ರೋಹಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ ಎಂದು ಪ್ರಶ್ನಿಸಿದರು.
ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಕೊಟ್ಟಿದ್ದೀರಿ ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.
ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವೆ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ಲುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.
ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ ಎಂದರು.
ಈ ಭಾಷಣದಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ಸಭೆಗೆ ನುಗ್ಗಿ ಸಿದ್ದ ರಾಮಯ್ಯ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ ಮಾಡಿದಾಗ ಈ ಹೈಡ್ರಾಮ ನಡೆಯಿತು.