ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಎಂಬವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಸೇರಿದಂತೆ 6 ಜನರ ವಿರುದ್ಧ ಕಲಬರುಗಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ (26) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಎಂಬುವವರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ ಮೃತ ಸಚಿನ್ ಅವರಿಂದ ಇನ್ನೂ 1 ಕೋಟಿ ಹಣ ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇನ್ನು ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ.
ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.