ಬೆಂಗಳೂರು:ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದ ಸಿ.ಪಿ ಯೋಗೇಶ್ವರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು,ಅವರು ನಾಳೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಯೋಗೇಶ್ವರ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜತೆಗೆ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ನಂತರ ಡಿಕೆ ಶಿವಕುಮಾರ್ ಜತೆಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಡಿಸಿಎಂ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.ನಾಳೆ ಬೆಳಗ್ಗೆ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆಯಾಗಲಿದ್ದು, ಇಂದು ಎಐಸಿಸಿ ಗೆ ಸಿಪಿವೈ ಹೆಸರು ಕಳುಹಿಸಿ ಕೊಡುತ್ತೇವೆ, ಎಐಸಿಸಿ ನಾಯಕರು ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.