ಬೆಂಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ವಜಾಗೊಳಿಸಿದೆ.
ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಸುನೀಲ್ ಕುಮಾರ್, ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
2023ರ ಮೇ 14ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸುನಿಲ್ ಕುಮಾರ್, ಪ್ರಮೋದ್ ಮುತಾಲಿಕರೇ ನೀವು ಹಣಕ್ಕೊಸ್ಕರ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯನ್ನು ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಬಾರಿ ಮಾಡಿಸಿದ್ದೀರಾ? ಆ ಹತ್ಯೆಯನ್ನು ಮಾಡಿದಂತಹವರು ಇವತ್ತಿಗೂ ಕಲಬುರಗಿ ಜೈಲಿನಲ್ಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಅವರ ವಿರುದ್ಧ ಪ್ರಮೋದ್ ಮುತಾಲಿಕ್ 2023ರ ಸೆ.7ರಂದು ಬೆಂಗಳೂರಿನ ಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಅದನ್ನು ರದ್ದುಗೊಳಿಸುವಂತೆ ಕೋರಿ ಸುನಿಲ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜನಪ್ರತಿನಿಧಿಗಳ ಕೋರ್ಟ್ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿದೆ. ಸುನಿಲ್ ಕುಮಾರ್ ಹೇಳಿಕೆಯಲ್ಲಿ ಮಾನನಷ್ಟ ಆಗುವ ಯಾವುದೇ ವಿಚಾರಗಳಿಲ್ಲ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.