ಬೆಂಗಳೂರು: ಅರಣ್ಯ ನಾಶವೇ ಭೂಕುಸಿತಕ್ಕೆ ಕಾರಣವಾಗಿದ್ದು, ಪಕೃತಿ ದತ್ತವಾದ ಅರಣ್ಯವನ್ನು ನಾಶಗೊಳಿಸಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕತ್ತರಿಸಿ ರಸ್ತೆ, ಮನೆ, ರೆಸಾರ್ಟ್ ಗಳನ್ನು ನಿರ್ಮಾಣ ಮಾಡಿರುವುದರಿಂದ ಭೂ ಕುಸಿತ ಉಂಟಾಗುತ್ತಿದೆ. ಈ ಕುರಿತು ಈಗಾಗಲೇ ತಜ್ಞರು ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸಲಹೆಯನ್ನೂ ನೀಡಿದ್ದಾರೆ. ಆದ್ದರಿಂದ ಭೂ ಕುಸಿತವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರ ನಂತರ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ 2015ರ ನಂತರ ಆಗಿರುವ ಎಲ್ಲಾ ಅರಣ್ಯ ಒತ್ತುವರಿ ಗುರುತಿಸಿ ಆ ಸ್ಥಳದಲ್ಲಿ ನಿರ್ಮಿಸಲಾಗಿರುವ ಬಡಾವಣೆ, ಕೃಷಿ ಭೂಮಿ, ಹೋಂ ಸ್ಟೇ, ರೆಸಾರ್ಟ್ ಸೇರಿದಂತೆ ಎಲ್ಲ ರೀತಿಯ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಒತ್ತುವರಿ ತೆರವು ಮಾಡಬೇಕು ಹಾಗೂ 1 ತಿಂಗಳೊಳಗಾಗಿ ಅದಕ್ಕೆ ಕೈಗೊಂಡಿರುವ ಕ್ರಮದ ಕುರಿತಂತೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.
ರಾಜ್ಯದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ್ದಾರೆ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿದ್ದು, ಅದಕ್ಕೆ ಈಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ. ಅದರಲ್ಲೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಆಗಿರುವ ಒತ್ತುವರಿ ತೆರವು ಮಾಡಿ, ಅದರ ಉಳಿವಿಗೆ ಹಾಗೂ ಮುಂದಿನ ಅನಾಹುತ ತಡೆಗೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.
`