ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್ ಸಮೀಕ್ಷೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ ಪಾಟೀಲ್ ಹೇಳಿದರು.
ಗುರುವಾರದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾ. ನಾಗಮೋಹನ್‌ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸುವ ವೇಳೆ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸಮೀಕ್ಷೆ ನಡೆಸಿತ್ತು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ಅಗತ್ಯವಿರುವ ತಂತ್ರಾಂಶ, ಆ್ಯಪ್ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ. ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಸಹ ನಿರ್ಧರಿಸಲಾಗಿದೆ. ಇದೇ ವೇಳೆ ಸಮೀಕ್ಷೆಗೆ ಆರ್ಥಿಕ ಇಲಾಖೆ 624 ಕೋಟಿ ರು. ವೆಚ್ಚಕ್ಕೆ ಅನುಮೋದನೆ ನೀಡಿದೆ ಎಂದರು.
ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡಲು ಸಚಿವ ಸಂಪುಟ ನಿರ್ಧರಿಸಿತು.
ಅದೇ ರೀತಿ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ನಡೆಸಲು ಮತದಾರರ ಪಟ್ಟಿ ಬಳಸಿಕೊಳ್ಳಲು ಒಪ್ಪಿಗೆ ನೀಡಿದೆ ಎಂದು ಹೇಳಿದರು.