ಜಮ್ಮು&ಕಾಶ್ಮೀರ: ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಪುಲ್ವಾಮಾದಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರನ್ನು ಸೆರೆ ಹಿಡಿಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ, ಸಂಘಟಿತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರನ್ನು ಬಂಧಿಸಿವೆ.
ಅವಂತಿಪೋರಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿವೆ. ಹೆಚ್ಚಿನ ವಿವರಗಳು ನಂತರ ಬರಲಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಅಘೋಷಿತ ಯುದ್ಧಕ್ಕೆ ವಿರಾಮ ಬಿದ್ದಿದ್ದರೂ ದೇಶದಲ್ಲಿ ಉಗ್ರರನ್ನು ಸದೆಬಡಿಯುವ ಕಾರ್ಯವನ್ನು ಸೇನೆ ಹಾಗೂ ಪೊಲೀಸರು ಮಾಡುತ್ತಿದ್ದಾರೆ.
ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.