ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
ಪೋಕ್ಸೋ ಪ್ರಕರಣ ಸಂಬಂಧ ಜೂ.12ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು.
ಈ ಕುರಿತು ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ.17ರಂದು ವಿಚಾರಣೆಗೆ ಹಾಜರಾಗುವುದಾಗಿ ತನಿಖಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ನಡುವೆ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿರುವ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದು ಜಾಮೀನು ರಹಿತ ಬಂಧನಕ್ಕೆ ವಾರೆಂಟ್ ಜಾರಿಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿತ್ತು.
ಇದರ ಬೆನ್ನಲ್ಲೇ ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಯಡಿಯೂರಪ್ಪರನ್ನು ಬಂಧಿಸದಂತೆ ಸಿಐಡಿಗೆ ನಿರ್ದೇಶನ ನೀಡಿತ್ತು ಮತ್ತು ಅಧೀನ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ಬಂಧನದ ವಾರಂಟ್ ಅಮಾನತಿನಲ್ಲಿ ಇರಿಸಿತ್ತು.ಅಲ್ಲದೇ ಕೋರ್ಟ್ ಜೂ.17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿ ತನಿಖೆ ಸಹಕರಿಸುವಂತೆ ಯಡಿಯೂರಪ್ಪ ಅವರಿಗೆ ಸೂಚಿಸಿತ್ತು.ಈ ಹಿನ್ನೆಲೆಯಲ್ಲಿ ಅವರು ಇಂದು ಸಿಐಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ











