ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92 ವರ್ಷ ) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.









