Share this news

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಮೈಸೂರು ಜಿಲ್ಲೆಯ ನಂಜನಗೂಡು ಬಳಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಯ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ (ಅ.16) ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಪ್ರಕರಣದ ವಿವರ : ದುಬೈನ ಫಾರ್ಚ್ಯೂನ್ ಗ್ರೂಫ್ ಆಫ್ ಹೋಟೆಲ್ಸ್ ಸಂಬಂಧಿತ ಹೋಟೆಲೊಂದಕ್ಕೆ ಉದ್ಯೋಗಕ್ಕೆ ಸೇರಿದ್ದ ನಾಗೇಶ್ ಪೂಜಾರಿಯು 2.5 ಕೋಟಿಗೂ ಅಧಿಕ ಹಣ ವಂಚಿಸಿದ್ದು ಈ ಬಗ್ಗೆ ಫಾರ್ಚ್ಯೂನ್ ಹೋಟೆಲ್ ಮ್ಯಾನೇಜರ್ ಸುನೀಲ್ ಕುಮಾರ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

25 ಲಕ್ಷಕ್ಕೂ ಹೆಚ್ಚಿನ ಹಣ ಅವ್ಯವಹಾರ ತನಿಖೆಯಾದ್ದರಿಂದ ಉಡುಪಿ ಸೆನ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿತ್ತು. ಆರೋಪಿ ನಾಗೇಶ್ ಪೂಜಾರಿ ಉಚ್ಚ ನ್ಯಾಯಾಲಯ (ಹೈಕೋರ್ಟ್)ದಲ್ಲಿ ಎಫ್.ಐ.ಆರ್. ಮೇಲಿನ ತನಿಖೆ ಸ್ಥಗಿತಗೊಳಿಸಲು ವಕೀಲರ ಮೂಲಕ ಅರ್ಜಿ ದಾಖಲಿಸಿದ್ದು 2023 ಜುಲೈನಲ್ಲಿ ಆ ಅರ್ಜಿ ವಜಾಗೊಳಿಸಲಾಗಿತ್ತು. ಬಳಿಕ ಆರೋಪಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಕರ್ನಾಟಕ ಉಚ್ಚ ನ್ಯಾಯಾಲಯದ ಮತ್ತು ಸೆಶನ್ಸ್ ನ್ಯಾಯಾಲಯದ ಆದೇಶಗಳನ್ನು ಮರೆಮಾಚಿ ಬ್ರಹ್ಮಾವರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶರಣಾಗಿ 2023 ಆಗಸ್ಟ್ ತಿಂಗಳಿನಲ್ಲಿ ಆರೋಪಿ ಜಾಮೀನು ಪಡೆದುಕೊಂಡಿದ್ದ. ಈ ಜಾಮೀನು ಆದೇಶವನ್ನು ಸರಕಾರ ಪ್ರಶ್ನಿಸಿ ಪರಿಷ್ಕೃತ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆಯ‌ನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕೈಗೊಂಡಿದ್ದು, ಅಲ್ಲಿಯೂ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿ ಆದೇಶ ನೀಡಲಾಗಿತ್ತು. ಈ ತೀರ್ಪಿನ ಬಳಿಕ ಆರೋಪಿ ತನ್ನ ಪರ ವಕೀಲರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಇದರ ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ‌ನ್ಯಾಯಾಧೀಶರಾದ ನಾಗಪ್ರಸನ್ನ ಅವರು ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿದ್ದರು. ಫಾರ್ಚೂನ್ ಗ್ರೂಫ್ ಪರ ಹೈಕೋರ್ಟ್ ನ್ಯಾಯವಾದಿ ಪ್ರಸನ್ನ ಶೆಟ್ಟಿ ಕೆರೆಬೆಟ್ಟು ವಾದಿಸಿದ್ದರು.

Leave a Reply

Your email address will not be published. Required fields are marked *