

ಬೆಂಗಳೂರು: ಗಣೇಶ ಚತುರ್ಥಿಗೆ ಎರಡೇ ದಿನಗಳಿದ್ದು, ಹಬ್ಬದ ಆಚರಣೆಗೆ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಭರದಿಂದ ಸಿದ್ಧತೆ ನಡೆಸುತ್ತಿವೆ. ಈ ನಡುವೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಿದೆ. ಅನಧಿಕೃತವಾಗಿ ತಯಾರಿಸುವ/ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್ಪಿಸಿಬಿ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು
ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಬೇಕು. ಹಾಗೂ ಆ.27 ರಿಂದ ಸೆ.15ರವರೆಗೆ ಬೈಕ್ ರ್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಳಕೆ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಲ್ಲಿ ಹೇಳಿದೆ.














