ಬೆಂಗಳೂರು: ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲಾಗುತ್ತಿದ್ದು, ಅ.7ರವರೆಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದ್ದು, ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.
2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನಿಸಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ವಹಿಸಲಾಗಿದೆ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ. ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ. ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು.
ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಎಲ್ಲರೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ ಎಂದು ತಿಳಿಸಿದರು.
ರಾಜ್ಯದ ಜನತೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು . ಹಾಗೆಯೇ ಆನ್ ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು.ಸಿಬ್ಬಂದಿ ಬಂದ ವೇಳೆ ಮನೆಯಲ್ಲಿ ಇಲ್ಲದವರು ಆಯೋಗದ ಸಹಾಯವಾಣಿ ಸಂಖ್ಯೆ 80507 70004ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅಥವಾ kacbckarnataka.govt.in ವೆಬ್ಸೈಟ್ ಮೂಲಕವೂ ಸರ್ವೆಯಲ್ಲಿ ಪಾಲ್ಗೊಳ್ಳಬಹುದು
ಒಟ್ಟಿನಲ್ಲಿ, ಇದೇ ತಿಂಗಳ 22 ರಿಂದ ರಾಜ್ಯದಲ್ಲಿ ಹೊಸ ಜಾತಿ ಗಣತಿ ನಡೆಯಲಿದೆ. ಮೊದಲಿಗೆ ಆಶಾ ಕಾರ್ಯಕರ್ತರು ಮನೆ ಮನೆಗೂ ಸ್ಟಿಕ್ಕರ್ ಅಂಟಿಸಿ 60 ಪ್ರಶ್ನೆಗಳಿರುವ ಬುಕ್ಲೆಟ್ ಕೊಡಲಿದ್ದಾರೆ. ಬಳಿಕ ಶಿಕ್ಷಕರು ಗಣತಿಗೆ ಮನೆ ಮನೆಗೂ ತೆರಳಿ, ಬುಕ್ಲೆಟ್ನಲ್ಲಿರುವ 60 ಪ್ರಶ್ನೆಗಳಿಗೆ ಮಾಹಿತಿ ಕಲೆ ಹಾಕಲಿದ್ದಾರೆ.