ಬೆಂಗಳೂರು, ಅ. 10: ಕಡೆ ಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ. ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈ ಐದು ದಿನಗಳ ಕಾಲ ಬಸ್ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಲಿದೆ.
ಆಗಸ್ಟ್- 5 ರಂದು ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಹಾಗೂ ಮಾತುಕತೆಗೂ ಕರೆಯುತ್ತಿಲ್ಲ ಎಂದು ಮತ್ತೆ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.
ಸರಕಾರ ಬೇಡಿಕೆಗಳ ಕುರಿತು ಮಾತುಕತೆ ಮುಂದುವರಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಅದರಂತೆ, ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 11 ಮತ್ತು ಸೆ. 15ರಂದು ರಾಜ್ಯ ಸರಕಾರಕ್ಕೆ ಪತ್ರ ಬರೆದು ಶೀಘ್ರವೇ ಸಭೆ ಕರೆದು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿತ್ತು. ಆದರೆ, ಸರಕಾರ ಈವರೆಗೂ ಮಾತುಕತೆ ಆರಂಭಿಸದೆ ಕಾರ್ಮಿಕ ವಿರೋಧಿ ಧೋರಣೆ ತಾಳಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಆರೋಪಿಸಿದ್ದಾರೆ.