
ಬೆಂಗಳೂರು, ನ.6: ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ತಡೆಯಲು ಮತ್ತು ಪೋಷಕರ ಇಷ್ಟಕ್ಕೆ ತಕ್ಕಂತೆ ಗುಣಮಟ್ಟದ ಶಿಕ್ಷಣ ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಂಬರುವ ಶೈಕ್ಷಣಿಕ ಸಾಲಿನಿಂದಲೇ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ) ಶಾಲೆಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಮಹತ್ವದ ನಿರ್ಧಾರ ಬಗ್ಗೆ ಮಾಹಿತಿ ನೀಡಿದ್ದು, ಪೋಷಕರಿಗೆ ತಮ್ಮ ಮಕ್ಕಳ ಬೋಧನಾ ಮಾಧ್ಯಮವನ್ನು ಆಯ್ಕೆ ಮಾಡುವ ಸಂಪೂರ್ಣ ಹಕ್ಕಿದೆ. ಸೂಕ್ತ ಮತ್ತು ಅರ್ಹ ಶಿಕ್ಷಕರ ತರಬೇತಿ ಮತ್ತು ನೇಮಕಾತಿಯ ಅಗತ್ಯವಿದ್ದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲು ಸ್ವಲ್ಪ ಸಮಯ ತೆಗೆದುಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.
ಯುಡಿಐಎಸ್ಇ ಪ್ಲಸ್ (UDISE+ 2025-26) ದತ್ತಾಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 48,527 ಸರ್ಕಾರಿ ಶಾಲೆಗಳಿದ್ದು, ಇವೆಲ್ಲವನ್ನೂ ಹಂತ ಹಂತವಾಗಿ ದ್ವಿಭಾಷಾ ಶಾಲೆಗಳನ್ನಾಗಿ ಮಾಡುವ ಗುರಿ ಹೊಂದಲಾಗಿದೆ. 2019-20ರಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಇದುವರೆಗೆ 6,539 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗಗಳನ್ನು ಆರಂಭಿಸಲಾಗಿದೆ.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಭಾರಿ ಬೇಡಿಕೆ ವ್ಯಕ್ತವಾಗಿದೆ. ಕಳೆದ ವರ್ಷ ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳಿಂದ ಬರೋಬ್ಬರಿ 11,555 ಶಾಲೆಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದವು. ಆರಂಭಿಕ ಹಂತವಾಗಿ ಪ್ರತಿ ತಾಲೂಕಿನಲ್ಲಿ ಗರಿಷ್ಠ ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಮೊದಲ 15 ಶಾಲೆಗಳನ್ನು ಆಯ್ಕೆ ಮಾಡಿ ದ್ವಿಭಾಷಾ ಬೋಧನೆಗೆ ಅವಕಾಶ ಕಲ್ಪಿಸಲಾಗಿತ್ತು.





.
.
.
.
.
.
.
.
.
.
.
.
.
.
.
.
.
.
.
.
