Share this news

ಬೆಂಗಳೂರು:ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೇ ಎರಡನೇ ಬಾರಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ ಹಿಂದಿರುಗಿಸಿದ ಬಳಿಕ ಇದೀಗ ಸರ್ಕಾರವು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಲು ಚಿಂತನೆ ನಡೆಸಿದೆ.

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ.ಈ ಮಸೂದೆ ಸಂವಿಧಾನ ವಿರೋಧಿ ಮಸೂದೆಯಾಗಿದೆ.ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯಕ್ಕೆ ಮಾತ್ರ ಶೇ 4 ರ ಮೀಸಲಾತಿ ಸರಿಯಲ್ಲ ಎಂದು ಬಿಜೆಪಿ ಸದನದಲ್ಲಿ ವಿಧೇಯಕವನ್ನು ತೀವ್ರವಾಗಿ ವಿರೋಧಿಸಿತ್ತು.ಆದರೆ ಬಿಜೆಪಿಯ ಪ್ರಬಲ ವಿರೋಧದ ನಡುವೆಯೂ ರಾಜ್ಯ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಧೇಯಕವನ್ನು ಅಂಗೀಕರಿಸಿದ ಬಳಿಕ ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು.ಆದರೆ ರಾಜ್ಯಪಾಲರು ಈ ಮಸೂದೆಗೆ ಅಂಕಿತ ಹಾಕದ ಹಿನ್ನೆಲೆಯಲ್ಲಿ ರಾಜಭವನ ಹಾಗೂ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಸೂದೆಯನ್ನು ಸಮಾಜದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲ ವರ್ಗಗಳನ್ನು ಬಲಪಡಿಸುವ ಸಾಧನವೆಂದು ಸಮರ್ಥಿಸಿಕೊಂಡಿದ್ದಾರೆ.ರಾಜ್ಯಪಾಲ ಗೆಹ್ಲೋಟ್ ಅವರ ಈ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಇದರಿಂದ ಸರ್ಕಾರ ಮತ್ತಷ್ಟು ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಕೈಬಿಟ್ಟು ,ಮಸೂದೆಯನ್ನು ನೇರವಾಗಿ ರಾಷ್ಟ್ರಪತಿಗಳಿಗೆ ಕಳುಹಿಸಲು ಸರ್ಕಾರ ಮುಂದಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಈ ವಿಷಯದ ಬಗ್ಗೆ ಅನೌಪಚಾರಿಕವಾಗಿ ಚರ್ಚಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

 

 

 

 

 

Leave a Reply

Your email address will not be published. Required fields are marked *