
ಬೆಂಗಳೂರು,ಮಾ.24 : ಈಗಾಗಲೇ ಗ್ರಾಮ ಪಂಚಾಯತಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು, ಲೋಕಲ್ ಫೈಟ್ ಗೆ ಏಪ್ರಿಲ್ ಮೇ ತಿಂಗಳಲ್ಲಿ ಮುಹೂರ್ತ ನಿಗದಿಯಾಗಬಹುದು ಎನ್ನುವ ಆಕಾಂಕ್ಷಿಗಳ ಲೆಕ್ಕಾಚಾರ ಇದೀಗ ತಲೆಕೆಳಗಾಗಿದೆ.
ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಧ್ಯಕ್ಕೆ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ. ನ್ಯಾಯಾಲಯವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಹೌದು ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸರ್ಕಾರಕ್ಕೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರದ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ.
ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ವಾದವನ್ನು ಆಲಿಸಿ,ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಅವಧಿ ಮುಗಿದ ರಾಜ್ಯದ 5,950 ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲು ಅಧಿಸೂಚನೆ ಹೊರಡಿಸಲು ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ. ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ , ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸರಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.















.
.
.
.
.
.
.
.
.
.
