
ಪುತ್ತೂರು: ಸಾರ್ವಜನಿಕ ಸಮಾರಂಭದಲ್ಲಿ ‘ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ’ ಭಾಷಣ ಮಾಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಅವರು ವಿವಾದಾತ್ಮಕ ಭಾಷಣ ಮಾಡಿದ್ದರು ಎನ್ನಲಾಗಿದೆ. ಪುತ್ತೂರು ತಾಲೂಕಿನ ನಿವಾಸಿ, ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಪ್ರಕಾರ, ಪ್ರಭಾಕರ್ ಭಟ್ ಅವರು ತಮ್ಮ ಭಾಷಣದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಜನಸಂಖ್ಯೆಯನ್ನು ಉಲ್ಲೇಖಿಸಿ, ಧಾರ್ಮಿಕ ವೈಷಮ್ಯವನ್ನು ಪ್ರಚೋದಿಸುವ ರೀತಿಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭಾಷಣವು ಖಾಸಗಿ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರವಾಗಿತ್ತು ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ದೂರಿನ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25 ರಂದು, ಪ್ರಭಾಕರ್ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ (ಅಪರಾಧ ಸಂಖ್ಯೆ 118/2025) ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 79, 196, 299, 302, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ,
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.






