ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.
ಇದರ ಬೆನ್ನಲ್ಲೇ, ಜನರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೆಲವು ಜಿಲ್ಲಾಡಳಿತಗಳು ಮಾರ್ಗಸೂಚಿ ಬಿಡುಗಡೆ ಮಾಡಿವೆ. ಬಿಸಿ ಗಾಳಿಯ ಆಘಾತದಿಂದ ಪಾರಾಗಲು ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ. ತಲೆ ಕುತ್ತಿಗೆ ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ. ಮೂರ್ಛೆ ಅಥವಾ ಅನಾರೋಗ್ಯ ಆನಿಸಿದರೆ, ತಕ್ಷಣ ವೈಧ್ಯರನ್ನು ಭೇಟಿ ಮಾಡಿ.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ ನಿಂಬೆ ನೀರು ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ ಇತ್ಯಾದಿ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಹೇಳಿದೆ.
