ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಗಳು ಸೇರಿದಂತೆ ರಾಜ್ಯದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಕಳೆದ ವರ್ಷ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದರಿಂದ ಈ ಪ್ರಕರಣಗಳನ್ನು ಹಿಂಪಡೆದ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯ ನಂತರ ಹೈಕೋರ್ಟ್ ತನ್ನ ಆದೇಶವನ್ನು ಹೊರಡಿಸಿತು. ಹಿಂಪಡೆಯಲಾದ ಪ್ರಕರಣಗಳಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಮತ್ತು ವಿವಿಧ ಕೋಮು ಘಟನೆಗಳಲ್ಲಿ ಭಾಗಿಯಾಗಿರುವ ಗಲಭೆಕೋರರು ಸೇರಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ