ಕಾರ್ಕಳ: ಸುವರ್ಣಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರುಣಾಕರ ಎಂಬಾತ ಎರ್ಲಪಾಡಿ ಗ್ರಾಮದ ಹೆರಂಜೆ ಎಂಬಲ್ಲಿನ ಸುವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಠಾಣಾ ಎಸ್ಐ ಲೋಲಾಕ್ಷ ಲಾರಿ ಸಹಿತ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಕಾರ್ಕಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು,ಮರಳು ವ್ಯಾಪಾರಿಗಳು ಬಡವರನ್ನು ಸುಲಿಗೆ ಮಾಡುತ್ತಿರುವ ಘಟನೆಗಳು ನಡೆಯುತ್ತಿದ್ದು, ಇದರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸರ್ಕಾರ ನಿಗದಿಪಡಿಸಿದ ದರದಲ್ಲೇ ಮರಳನ್ನು ಪೂರೈಸಲು ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ