ಬೆಂಗಳೂರು: ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ಕ್ರಮಕ್ಕೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ವಿಧಿಗೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.
ಹೈಕೋರ್ಟ್ಗೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ಸರ್ಕಾರದ ಕ್ರಮ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ, ಮತ್ತಿತರರು 3 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಿದೆ. ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್, ಕಾನೂನಿನ ಪ್ರಕಾರ ಜಿ.ಪಂ. ಹಾಗೂ ತಾ.ಪಂ. ಅವಧಿ ಮುಗಿದ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಆದರೆ ಅವಧಿ ಮುಗಿದು ನಾಲ್ಕು ವರ್ಷ ಕಳೆದಿದ್ದರೂ ಚುನಾವಣೆ ನಡೆಸಿಲ್ಲ. ಅವುಗಳು ಸದ್ಯ ರಾಜ್ಯ ಸರ್ಕಾರದ ಆಡಳಿತಾಧಿಕಾರಿಗಳ ಅಧೀನದಲ್ಲಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಅಚ್ಚರಿಗೊಂಡ ಮುಖ್ಯ ನ್ಯಾಯಮೂರ್ತಿಗಳು, ಅಂದರೆ ನಾಲ್ಕು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲವೇ ಎಂದು ಪ್ರಶ್ನಿಸಿ, ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ಪರಿಚ್ಛೇದಕ್ಕೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕ ವಿನಾಯಿತಿ ಪಡೆದಿದೆಯೇ ಎಂದು ಸರ್ಕಾರಿ ವಕೀಲರನ್ನು ಕಟುವಾಗಿ ಪ್ರಶ್ನಿಸಿದರು.
ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ , ಈ ಮೊದಲು ಆ ಅಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮುಗಿಸಿತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಪುನರ್ ವಿಂಗಡಣೆ ಹಾಗೂ ಮೀಸಲು ನಿಗದಿ ಅಧಿಕಾರವನ್ನು ಆಯೋಗದಿಂದ ಹಿಂಪಡೆದಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ. ಇನ್ನು 12 ವಾರಗಳಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವೇ ಈ ಹಿಂದೆ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ವರ್ಷ ಉರುಳಿದ್ದರೂ ಸರ್ಕಾರ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಅದಕ್ಕಾಗಿಯೇನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.















`
