ಕಾರ್ಕಳ:79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗಿ ಬೆಳೆಯಲಿದೆ: ಶಾಸಕ ಸುನಿಲ್ ಕುಮಾರ್
ಕಾರ್ಕಳ,ಆ.15:ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ ಬದಲಾಗಿ ಸುಧೀರ್ಘವಾದ ಕ್ರಾಂತಿಕಾರಿ ಹೋರಾಟ , ಸಾವಿರಾರು ಜನರ ಬಲಿದಾನದ ಫಲವಾಗಿ ಬ್ರಿಟೀಷರು ವಿಧಿಯಿಲ್ಲದೇ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟರು.ಆದ್ದರಿಂದ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ನಾವೆಲ್ಲರೂ ತಿಳಿದುಕೊಳ್ಳಬೇಕಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಕಾರ್ಕಳ ತಾಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತ ಇಂದು ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಬೆಳೆಯುತ್ತಿದೆ. ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುವ ಮೂಲಕ ಭಾರತದ ಮಿಲಿಟರಿ ಶಕ್ತಿಯ ಅನಾವರಣವಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಚಂದ್ರನ ಅಂಗಳಕ್ಕೆ ಹೆಜ್ಜೆಯನ್ನಿಟ್ಟ ಕೆಲವೇ ಕೆಲವು ರಾಷ್ಟ್ರಗಳ ಪೈಕಿ ಭಾರತ ಕೂಡ ಈ ಸಾಧನೆ ಮಾಡಿದೆ. ಜಾಗತಿಕ ಆರ್ಥಿಕತೆಯಲ್ಲಿ ಪ್ರಸ್ತುತ 5 ನೇ ಸ್ಥಾನದಲ್ಲಿರುವ ಭಾರತ ಮುಂದಿನ ವರ್ಷಗಳಲ್ಲಿ 3 ನೇ ಸ್ಥಾನಕ್ಕೆ ಏರಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದ್ದು,ಈ ನಿಟ್ಟಿನಲ್ಲಿ ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ಜಗತ್ತಿನ 3ನೇ ಆರ್ಥಿಕತೆಯ ರಾಷ್ಟ್ರವಾಗಲಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಕಾರ್ಕಳ ತಹಸೀಲ್ದಾರ್ ಪ್ರದೀಪ್ ಕುಮಾರ್ ನಾವು ಭಾರತೀಯರು ಸಮಾನರು ಎನ್ನುವ ಮನೋಭಾವನೆಯಿಂದ ಜೀವನ ನಡೆಸಬೇಕಿದೆ. ಭಾರತವು ವಿಜ್ಞಾನ ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿಕ್ಷಣದಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ,ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಸ್ವಾಗತಿಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ವಂದಿಸಿದರು. ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿದರು.