

ಕಾರ್ಕಳ :ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎನ್ನುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಡವರ ಶೋಷಣೆಗೆ ಇಳಿದಿದೆ. ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ನೀಡಲಾಗದೇ ಬಡವರನ್ನು ಲೂಟಿ ಮಾಡುತ್ತಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಜೂ 23 ರಂದು ಕಾರ್ಕಳ ಬಸ್ಸು ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಡವರಿಗೆ ನಿವೇಶನ ಹಂಚಿಕೆ ಮಾಡಿಲ್ಲ, ಬಡವರಿಗೆ ಒಂದೇ ಒಂದು ಮನೆಯನ್ನು ಮಂಜೂರು ಮಾಡಿಲ್ಲ. ಭೂ ಪರಿವರ್ತನೆ ಹಾಗೂ 9/11 ಸಮಸ್ಯೆಯಿಂದ ಜನ ಪರದಾಟ ನಡೆಸುತ್ತಿದ್ದಾರೆ. ಬಡ ಕೃಷಿಕರ ಅಕ್ರಮ ಸಕ್ರಮ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುತ್ತಿದ್ದು ಇದು ಬಡವರ ವಿರೋಧಿ ಸರ್ಕಾರ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದ್ದು,ಈಗಾಗಲೇ ಸುಮಾರು 25 ಸಾವಿರಕ್ಕೂ ಮಿಕ್ಕಿ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಫಲಾನುಭವಿಗಳ ಪಿಂಚಣಿ ರದ್ದುಪಡಿಸಲು ಮುಂದಾಗಿದೆ. ಇದು 60% ಕಮಿಷನ್ ಸರ್ಕಾರ ಎಂದು ಸುನಿಲ್ ಕುಮಾರ್ ಆರೋಪಿಸಿದರು.
ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಪಂಚಾಯತಿಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ನಯಾಪೈಸೆ ಅನುದಾನ ನೀಡಿಲ್ಲ. ಪಂಚಾಯಿತಿಗಳಿಗೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಅನುದಾನಕ್ಕೆ ಕತ್ತರಿ ಹಾಕಲಾಗಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕೆಂದರು.ಪರಶುಯಥೀಮ್ ಪಾರ್ಕ್ ವಿಚಾರದಲ್ಲಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿ ಕರಾವಳಿ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರು ಥೀಮ್ ಪಾರ್ಕ್ ವಿಚಾರದ ತನಿಖೆಯನ್ನು ಯಾಕೆ ಮಾಡಿಲ್ಲ. ನಿಮ್ಮ ರಾಜಕೀಯ ಲಾಭಕ್ಕಾಗಿ ಪರಶುರಾಮ ಥೀಮ್ ಪಾರ್ಕ್ ಪೂರ್ಣಗೊಳಿಸದೇ ಕಾರ್ಕಳಕ್ಕೆ ದ್ರೋಹ ಬಗೆದಿದ್ದೀರಿ ಎಂದು ನವೀನ್ ನಾಯಕ್ ಆರೋಪಿಸಿದರು.
ಸ್ಥಳೀಯ ಮುಖಂಡ ನಿತ್ಯಾನಂದ ಪೈ, ಪುರಸಭೆ ಮಾಜಿ ಉಪಾಧ್ಯಕ್ಷ ಗಿರಿಧರ್ ನಾಯಕ್, ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್,ಸಂದರ್ಭೋಚಿ ತವಾಗಿ ಮಾತನಾಡಿದರು.
ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು, ನಗರ ಅಧ್ಯಕ್ಷ ನಿರಂಜನ್ ಜೈನ್, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು







