ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
“ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ.
ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ರಾಜೀನಾಮೆ ಪಡೆಯಲಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ಕಾಂಗ್ರೆಸ್ ಪಕ್ಷ ರಾಜೀನಾಮೆ ಪಡೆಯಲು ಮುಂದಾಗದಿದ್ದಲ್ಲಿ ಸದಾ ಸಂವಿಧಾನ, ನ್ಯಾಯಾಂಗ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಭಾಷಣ ಮಾಡುವ ಪಕ್ಷದ ನಕಲಿ ಮುಖವಾಡ ದೇಶದ ಜನತೆಯ ಮುಂದೆ ಕಳಚಿ ಬೀಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







in 
