ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟೀಸ್’ ನಿಂದ ರಾಜಕೀಯ ದೇಣಿಗೆ ಪಡೆದ ಆರೋಪದ ಮೇಲೆ ಎನ್ಐಎ ತನಿಖೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ಸೋಮವಾರ ತಿಳಿಸಿವೆ.
ಈ ಸಂಬಂಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಕ್ಸೆನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಕೇಜ್ರಿವಾಲ್ ನೇತೃತ್ವದ ಎಎಪಿಯು ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ ದೇಣಿಗೆ ಪಡೆದಿರುವ ಬಗ್ಗೆ ತಮಗೆ ದೂರು ಬಂದಿದೆ ಎಂದು ಹೇಳಿದ್ದಾರೆ.ದೂರುದಾರರು ಕಳುಹಿಸಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪರೀಕ್ಷೆ ಒಳಪಡಿಸುವುದು ಸೇರಿದಂತೆ ಎನ್ಐಎ ತನಿಖೆಯ ಅಗತ್ಯವಿದೆ ಎಂದು ಸಕ್ಸೆನಾ ಹೇಳಿದ್ದಾರೆ.
ಮುಖ್ಯಮಂತ್ರಿಯೊಬ್ಬರ ವಿರುದ್ಧ ದೂರು ನೀಡಲಾಗಿದೆ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಯಿಂದ ಎಎಪಿ ರಾಜಕೀಯ ದೇಣಿಗೆ ಪಡೆದಿದೆ ಎಂದು ದೂರುದಾರರು ಆರೋಪಿಸಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮುಂದಾಗಿರುವ ಹೊತ್ತಲ್ಲೇ ಲೆಫ್ಟಿನೆಂಟ್ ಗವರ್ನರ್ ಸಕ್ಸೆನಾ ಅವರ ಈ ಶಿಫಾರಸು ಮತ್ತು ದೆಹಲಿ ಸಿಎಂಗೆ ಮತ್ತಷ್ಟು ಸಂಕಷ್ಟ ತಂದಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
