ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕ್ಕೆ ವಹಿಸಿ ಕೇಂದ್ರ ಗೃಹಸಚಿವಾಲಯ ಆದೇಶ ಹೊರಡಿಸಿದೆ. ಬಿಜೆಪಿ ನಾಯಕರು ಮತ್ತು ಹಿಂದೂ ಕಾರ್ಯಕರ್ತರು ಎನ್‌ಐಎ ತನಿಖೆಗೆ ಆಗ್ರಹಿಸಿದ್ದರು. ಪ್ರಕರಣದಲ್ಲಿ ಭಾರಿ ಸಂಚು ರೂಪಿಸಲಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದರು. ಮೂರು ತಿಂಗಳ ಮುಂಚೆಯೇ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದು ತಿಳಿದುಬಂದಿತ್ತು. ಈಗ ಎನ್‌ಐಎ ತನಿಖೆಯಿಂದ ಸತ್ಯಾಂಶ ಹೊರಬೀಳುವ ಸಾಧ್ಯತೆ ಇದೆ.
ಕಳೆದ ಮೇ.01 ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬAಧ ಈವರೆಗೆ 11 ಜನರನ್ನು ಬಂಧಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿತ್ತು.