ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಲಂಚ ಪಡೆದ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿರುವ ವಿಚಾರಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ಉದ್ದೇಶಿಸಿ ಚೋರ್ ಗುರು ಚಾಂಡಲ್ ಶಿಷ್ಯ ಎಂದು ಬರೆದುಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ. ರಾಜ್ಯ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾಗೆ ದೂರು ನೀಡಲಾಗಿದೆ.
ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪ್ರಧಾನಿ ಹಾಗೂ ಗೃಹ ಸಚಿವರ ವಿರುದ್ಧ ಸಂವಿಧಾನ ವಿರೋಧ ಪದ ಬಳಕೆ ಮಾಡಿರುವ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆಯನ್ನ ತಕ್ಷಣ ಬಂಧಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ಕಾನೂನಿನ ವಿರುದ್ಧವಾಗಿ, ಸಂವಿಧಾನದ ವಿರುದ್ಧವಾಗಿ ‘ಚಾಂಡಾಳ’ ಎಂಬ ಪದ ಬಳಸಿದ್ದಾರೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.