ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಗೊಂದಲ ಇರುವ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಕುರಿತು ಜಟಿಲವಾದ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆದಿದೆ. ಗೊಂದಲ ಇರುವ ಕ್ಷೇತ್ರಗಳ ಸಂಭಾವ್ಯರ ಪಟ್ಟಿಯನ್ನೂ ಹೈಕಮಾಂಡ್‌ಗೆ ಕಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈ ಕ್ಷೇತ್ರಗಳಿಗೆ ಪ್ರತೀ ಕ್ಷೇತ್ರಕ್ಕೂ ಕನಿಷ್ಠ 3 ಹೆಸರುಗಳಿರುವ ಪಟ್ಟಿಯನ್ನು ಕಳಿಸಲು ನಿರ್ಧಾರ ಮಾಡಲಾಗಿದೆ.
ಗೊಂದಲವಿಲ್ಲದ ಹಾಗೂ ಗೆಲ್ಲುವ ಗ್ಯಾರಂಟಿಯಿರುವ ಕಡೆ, ಸರ್ವ ಸಮ್ಮತ ಸಂಭಾವ್ಯರ 15ಕ್ಕೂ ಅಧಿಕ ಹೆಸರುಗಳಿಗೆ ಕೋರ್ ಕಮಿಟಿ ಸಹಮತ ಸೂಚಿಸಿದೆ. ಒಂದೆರಡು ದಿನಗಳಲ್ಲಿ ಹೈಕಮಾಂಡ್‌ಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಪಟ್ಟಿ ರವಾನೆಯಾಗಲಿದೆ. ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡುವ ಎರಡನೇ ಪಟ್ಟಿಯಲ್ಲಿ ಕರ್ನಾಟಕ ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ನಾಯಕರು ಸಂಭಾವ್ಯರ ರಾಜ್ಯ ಪಟ್ಟಿ ಫೈನಲ್ ಮಾಡಲಾಗಿದೆ. ಮೈತ್ರಿ ಸೀಟು ಹಂಚಿಕೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಜೆಡಿಎಸ್‌ಗೆ ಎಷ್ಟು ಮತ್ತು ಯಾವ ಕ್ಷೇತ್ರ ಬಿಟ್ಟು ಕೊಡಬೇಕೆಂಬ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ರಾಜ್ಯ ನಾಯಕರು ಬಿಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದ ನಂತರ ಮೈತ್ರಿ ಸೀಟು ಹಂಚಿಕೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ ಎನ್ನುವ ಮಾಹಿತಿ ಲಭಿಸಿದೆ.