ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ನಿನ್ನೆ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದೆ.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ಸಹ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಡಿಸೆಂಬರ್ 24ರೊಳಗೆ ಅಂದರೆ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.
ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ2, ಪತ್ನಿ ಸಹೋದರ ಮಲ್ಲಿಕಾರ್ಜನ್ ಸ್ವಾಮಿ ಎ3, ಜಮೀನು ಮಾರಿದ ದೇವರಾಜು ಎ4 ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ.







in 
