ಬೆಂಗಳೂರು: ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಸೇರಬೇಕಿದ್ದು, ಕಾನೂನಾತ್ಮಕವಾಗಿ ಎದುರಿಸುವ ನಿಟ್ಟಿನಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಒಂದನ್ನು ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿಕೊಂಡರೂ, ಕಾನೂನುಬದ್ಧವಾಗಿಯೇ ಪಡೆದಿದ್ದೇನೆ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ 14 ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಸ್ಪಷ್ಟವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ ಎನ್ನಲಾಗಿದೆ.
`