ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ನಾಳೆ(ಸೆಪ್ಟೆಂಬರ್ 24) ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ (ಮಂಗಳವಾರ) ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.
ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಟಿಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.
in