
ಪಡುಬಿದ್ರಿ ಆ.8: ಕಾಪು ತಾಲೂಕು ಮುದರಂಗಡಿಯ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬAಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧನದ ವೇಳೆ ಓರ್ವ ಆರೋಪಿ ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ ಘಟನೆ ನಡೆದಿದೆ.
ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿರುವ ಪ್ರಿನ್ಸ್ ಎಂಟರ್‌ಪ್ರೈಸಸ್ ಕಚೇರಿಗೆ ಬಂದಿದ್ದ ಡೇವಿಡ್ ಡಿಸೋಜಾ ಅವರು ಬಳಿಕ ತಮ್ಮ ಥಾರ್ ವಾಹನದ ಚಾಲಕನ ಬದಿಯ ಬಾಗಿಲಿನ ಬಳಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ಆರೋಪಿಗಳ ಪೈಕಿ ಓರ್ವ ಪಿಸ್ತೂಲ್‌ನಿಂದ ಅವರ ತಲೆಗೆ ಗುಂಡು ಹಾರಿಸಿದ್ದ. ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.ಈ ಸಂಬAಧ ಶಿರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಬೈಂದೂರಿನ ಒತ್ತಿನೆಣೆ ಬಳಿ ಬಸ್ ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಗಳು ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದರು. ಆರೋಪಿಗಳನ್ನು ಬೆನ್ನಟ್ಟಿದ ವೇಳೆ ಆರೋಪಿ ರಾಜು (42), ಉತ್ತರ ಪ್ರದೇಶದ ಥಾಣಾ ಪಿಲ್ವ ನಿವಾಸಿ, ಕಾಪು ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ, ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಉತ್ತರಾಖಂಡದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ (23) ಅವರನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಹಾಗೂ ಬಿಹಾರದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಅವರನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಶನಿವಾರ ಬೆಳಿಗ್ಗೆ ವಶಕ್ಕೆ ಪಡೆಯಲಾಗಿದೆ.
ಹಣಕಾಸಿನ ವೈಮನಸ್ಸು:
ಡೇವಿಡ್ ಡಿಸೋಜಾ ನಡೆಸುತ್ತಿದ್ದ ಕಾಮಗಾರಿಗೆ ಸಂಬAಧಿಸಿದAತೆ ಅನ್ಯ ರಾಜ್ಯದ ಕಂಪೆನಿಯೊAದರೊAದಿಗೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ ಹಿನ್ನೆಲೆಯಲ್ಲಿ ಅವರನ್ನು ಹತ್ಯೆ ಮಾಡಲು ಸುಪಾರಿ ನೀಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಸಹಕರಿಸಿದವರು, ಹಣಕಾಸಿನ ನೆರವು ನೀಡಿದವರು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದವರ ಪತ್ತೆ ಕಾರ್ಯ ಮುಂದುವರಿದಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ನೇತೃತ್ವದಲ್ಲಿ, ಕಾಪು ವೃತ್ತ ನಿರೀಕ್ಷಕ ಅಝ್ಮತ್ ಅಲಿ ಜಿ., ಡಿ.ಎಸ್.ಬಿ. ವಿಭಾಗದ ಎಸ್ಸೈ ಹರೀಶ್, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್, ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಎಸ್ಸೈ ಮಹೇಶ್, ಕಾಪು ಎಸ್ಸೈ ತೇಜಸ್ವಿ, ಶಿರ್ವ ಎಸ್ಸೈ ಮಂಜುನಾಥ ಮರಬದ, ಕೊಲ್ಲೂರು ಎಸ್ಸೈ ವಿನಯ್, ಕಾರ್ಕಳ ಗ್ರಾಮಾಂತರ ಎಸ್ಸೈ ಪ್ರಸನ್ನ ಎಂ.ಎಸ್., ಪಡುಬಿದ್ರಿ ಎಸ್ಸೈಗಳಾದ ಶಕ್ತಿವೇಲು ಹಾಗೂ ಅನಿಲ್, ಶಿರ್ವ ಎಸ್ಸೈ ಲೋಹಿತ್ ಕುಮಾರ್, ಪ್ರೊಬೆಷನರಿ ಎಸ್ಸೈ ಶಿಫಾಝ್ ಹಾಗೂ ಸಿಬ್ಬಂದಿಯವರ ತಂಡ, ಭಟ್ಕಳ ಹಾಗೂ ಕುಮಟಾ ಪೊಲೀಸರು, ಜಿಲ್ಲಾ ಅಪರಾಧ ಪರಿಶೀಲನಾಧಿಕಾರಿ, ಬೆರಳಚ್ಚು, ಶ್ವಾನದಳ ಹಾಗೂ ಸಿ.ಡಿ.ಆರ್. ಸೆಲ್ ಉಡುಪಿ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
