ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಯಾವುದೇ ನಾಯಕರು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸಿಲ್ಲ ಎಂದು ಡಿಸಿಎಂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದರು.
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇದು ಮುಖ್ಯಮಂತ್ರಿ ವಿರುದ್ಧದ ರಾಜಕೀಯ ಪಿತೂರಿ. ವಿರೋಧ ಪಕ್ಷಗಳು ಅನಗತ್ಯವಾಗಿ ರಾಜಕೀಯ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಇದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಕೆಲವು ನಾಯಕರು ಸಿಎಂ ಹುದ್ದೆಗೆ ಹಕ್ಕು ಮಂಡಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದಾಗ ಅದನ್ನು ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
in