ಬೆಂಗಳೂರು:ಸೆಲೆಬ್ರಿಟಿಗಳು,ಗಣ್ಯ ವ್ಯಕ್ತಿಗಳ ಸೇರಿದಂತೆ ಯಾರ ಹುಟ್ಟುಹಬ್ಬವನ್ನು ಕೂಡ ಶಾಲೆಗಳಲ್ಲಿ ಆಚರಣೆ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ರಾಜಕೀಯ ಮುಖಂಡರುಗಳು,ಮಠಾಧೀಶರು ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ,ಊಟ ಹಂಚುವ ಮೂಲಕ ಆದ್ದೂರಿಯಾಗಿ ಆಚರಿಸುತ್ತಿರುವುದರಿಂದ ಬಡಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಕ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ. ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಇಂತಹ ಕಾರ್ಯಕ್ರಮಗಳಿಂದ ಅಂತಹ ಮಕ್ಕಳ ಮನಸ್ಸಿನಲ್ಲಿ ಒಂಟಿತನದ ಪ್ರಜ್ಞೆ ಕಾಡುವ ಸಾಧ್ಯತೆಯಿದೆ.
ಆದ್ದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸನ್ನಡ ಹಾಗೂ ಆಹ್ಲಾದಕರವಾಗುವಂತೆ ನೋಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.