
ಉಡುಪಿ, ಅಕ್ಟೋಬರ್ 29: ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಪ್ರಧಾನಿ ಮೋದಿ, ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ.ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ನವೆಂಬರ್ 8ರಿಂದ 30ರವರೆಗೆ ಉಡುಪಿಯ ಶ್ರೀಕೃಷ್ಣ ಮಠ ಮತ್ತು ಪುತ್ತಿಗೆ ಮಠದ ಆಶ್ರಯದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ನಡೆಯಲಿದೆ. ಕೊನೆಯ ದಿನ ಅಂದರೆ ನ.30ರಂದು ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರುವ ನಿರೀಕ್ಷೆ ಇದ್ದು, ದೇಶದ ಗಣ್ಯರು ಸೇರಿದಂತೆ ಸಂತರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.




