ಬೆಂಗಳೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸಾಹಿತಿ ಮತ್ತು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠದಲ್ಲಿ ಈ ಅರ್ಜಿಗಳ ವಿಚಾರಣೆ ನಡೆಯಿತು. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಒಟ್ಟು ಮೂರು ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು.
ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದ ಮಂಡಿಸಿದರು. ಭುವನೇಶ್ವರಿ, ಕನ್ನಡ ಬಾವುಟದ ಬಗ್ಗೆ ಮುಷ್ತಾಕ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದ ವಕೀಲರು, ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆ ಮಾಡಿದರು.ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್ ಕುಮಾರ್, ಹೆಚ್.ಎಸ್.ಗೌರವ್ ಎಂಬವರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅವುಗಳನ್ನೂ ಕೋರ್ಟ್ ವಜಾಗೊಳಿಸಿದೆ.