ಬೆಂಗಳೂರು, ಅಕ್ಟೋಬರ್ 23: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ಪೀಠ ವಿಚಾರಣೆ ನಡೆಸಿ, ಆದೇಶವನ್ನು ಕಾಯ್ದಿರಿಸಿದೆ.
ಯಡಿಯೂರಪ್ಪ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ 2024 ರ ಮಾರ್ಚ್ನಲ್ಲಿ ಸಂತ್ರಸ್ತೆಯ ತಾಯಿ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ, ಪ್ರಕರಣದ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಈಗಾಗಲೇ ಸಿಕ್ಕಿದೆ. ಪ್ರಕರಣದ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇದೀಗ ಮುಕ್ತಾಯಗೊಂಡಿದ್ದು, ಆದೇಶ ಪ್ರಕಟವಾಗಬೇಕಿದೆ.