ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಈ ತೀರ್ಪು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎನ್ನುವ ಆರೋಪದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.
ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.