ಉಡುಪಿ : ಪ್ರತಿಷ್ಠಿತ ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದಂತಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಮೂಲತ: ಸಿಟಿ ಮುನ್ಸಿಪಲ್ ಕೌನ್ಸಿಲ್, ಪುರಸಭೆಯಾಗಿದ್ದ ಉಡುಪಿ ನಗರಸಭೆ 1996ರಲ್ಲಿ ಮಲ್ಪೆ (ಕೊಡವೂರು), ಪುತ್ತೂರು, ಶಿವಳ್ಳಿ, 76 ಬಡಗಬೆಟ್ಟು ಮತ್ತು ಹೆರ್ಗ ಗ್ರಾಮಗಳ ಸೇರ್ಪಡೆಯೊಂದಿಗೆ ನಗರಸಭೆಯ ಸ್ಥಾನಮಾನವನ್ನು ಪಡೆದಿದೆ. 2010ರಲ್ಲಿ 75ನೇ ವರ್ಷಾಚರಣೆಯನ್ನು ನಡೆಸಿರುವ ಉಡುಪಿ ನಗರಸಭೆಗೆ ಪ್ರಸಕ್ತ 90ನೇ ವರ್ಷ ತುಂಬುತ್ತಿರುವ ಸುಸಂದರ್ಭದಲ್ಲಿ ಮಹಾ ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪ ಪ್ರಗತಿಯಲ್ಲಿರುವುದು ಹರ್ಷದಾಯಕವಾಗಿದೆ. ಈಗಾಗಲೇ ಹಲವಾರು ವಿನೂತನ ಯೋಜನೆಗಳೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಉಡುಪಿ ನಗರಸಭೆಗೆ ಮಹಾ ನಗರಪಾಲಿಕೆಯ ಸ್ಥಾನಮಾನ ವರದಾನವಾಗಿ ಪರಿಣಮಿಸಲಿದೆ.
ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ರೂಪುಗೊಳ್ಳುವ ಪ್ರಕ್ರಿಯೆಯಿಂದ ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿಯಂತಹ ಯೋಜನೆಗಳು ಹಾಗೂ ಬ್ರಹತ್ ಮೊತ್ತದ ಅನುದಾನಗಳು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಪ್ರಕ್ರಿಯೆ ಅತಿ ಶೀಘ್ರವಾಗಿ ಕಾರ್ಯಗತಗೊಂಡು ಉಡುಪಿ ಮಹಾ ನಗರಪಾಲಿಕೆ ಅಸ್ತಿತ್ವಕ್ಕೆ ಬರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗುವಂತಾಗಲಿ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.