ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಈಗಾಗಲೇ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಆದರೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಆ ಸಂದರ್ಭದಲ್ಲಿಯೂ ವರಿಷ್ಠರ ನಿರ್ಧಾರಕ್ಕೆ ಬದ್ದನಾಗಿದ್ದೆ,ಇದಾದ ಬಳಿಕ ಪಕ್ಷದ ವರಿಷ್ಠರು ವಿಧಾನ ಪರಿಷತ್ ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು ಎಂದರು.
ಆದರೆ ಬಿಜೆಪಿ ವರಿಷ್ಠರ ನಿರ್ಧಾರ ಬೇಸರ ತರಿಸಿದೆ.ನಾನು ಪಕ್ಷೇತರನಾಗಿ ಗೆದ್ದರೆ ಅಥವಾ ಸೋತರೂ ಬಿಜೆಪಿ ಪಕ್ಷದಲ್ಲೇ ಇರುತ್ತೇನೆ ಎಂದು ರಘುಪತಿ ಭಟ್ ಸ್ಪಷ್ಟಪಡಿಸಿದ್ದಾರೆ.
ರಘುಪತಿ ಭಟ್ ಮನವೊಲಿಸಲು ಸುನಿಲ್ ಕುಮಾರ್ ಯತ್ನ ವಿಫಲ
ವಿಧಾನ ಪರಿಷತ್ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಇದರಿಂದ ಎಚ್ಚೆತ್ತ ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರನ್ನು ರಘುಪತಿ ಭಟ್ ಬಂಡಾಯ ಶಮನಗೊಳಿಸಲು ಕಣಕ್ಕಿಳಿಸಿದ್ದರು. ರಘುಪತಿ ಭಟ್ ಜತೆ ಸುದೀರ್ಘ ಮಾತುಕತೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸುನಿಲ್ ಕುಮಾರ್, ರಘುಪತಿ ಭಟ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅವರು ಪಕ್ಷದ ನಿಲುವಿಗೆ ಬದ್ದರಾಗಿ ಉಮೇದುವಾರಿಕೆ ಹಿಂಪಡೆಯುವ ವಿಶ್ವಾಸವಿದೆ ಎಂದರು