
ಬೆಂಗಳೂರು, ಡಿ.03: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜೀವಿತಾವಧಿ ಸೆರೆವಾಸ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದನ್ನು ಪ್ರಶ್ನಿಸಿದ ಪ್ರಜ್ವಲ್ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಾಡದ ತೋಟದ ಮನೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಮೇಲೆ ಪ್ರಜ್ವಲ್ ರೇವಣ್ಣ ಶಿಕ್ಷೆಗೆ ಒಳಗಾಗಿದ್ದರು. 2021 ರಲ್ಲಿ ಹಾಸನದ ತೋಟದ ಮನೆ ಮತ್ತು ಬೆಂಗಳೂರಿನ ನಿವಾಸದಲ್ಲಿ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ನಡೆದಿದ್ದು, ಆರೋಪಿಯು ಈ ಕೃತ್ಯವನ್ನು ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆಂದು ಹೇಳಲಾಗಿತ್ತು.ಆಗಸ್ಟ್ 2 ರಂದು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಶಿಕ್ಷೆಗೊಳಗಾದ ಪ್ರಜ್ವಲ್ಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ, ಅವರಿಗೆ ಒಟ್ಟು 11.50 ಲಕ್ಷ ರೂ. ದಂಡ ವಿಧಿಸಿದ್ದರು ಮತ್ತು ಈ ದಂಡದ ಮೊತ್ತದಲ್ಲಿ ರೂ. 11.25 ಲಕ್ಷವನ್ನು ಸಂತ್ರಸ್ತೆಗೆ ಪಾವತಿಸುವಂತೆ ಹೇಳಿದ್ದರು.
.
.
