Share this news

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ  ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.

ಈ ಬಗ್ಗೆ ಅಧಿಕೃತವಾಗಿ ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕನ್ನಡಿಗರ ಮೀಸಲಾತಿ ವಿಧೇಯಕವನ್ನು ಪುನರ್ ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಸಂತೋಷ್ ಲಾಡ್ ಹಾಗೂ ನಾಲ್ಕೂ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಾಗುತ್ತದೆ. ಕ್ಯಾಬಿನೆಟ್‌ನಲ್ಲಿ ಸೂಕ್ತವಾಗಿ ಮಾಹಿತಿ ಹಂಚಿಕೆಯಾಗದೆ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಈ ಅಧಿವೇಶನದಲ್ಲಿ ವಿಧೇಯಕ ಮಂಡಿಸದಿರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಈ ಮಸೂದೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದರು. ಕಿರಣ್ ಮಜುಂದಾರ್, ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದರು.

ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ನಂತರ ಎಚ್ಚೆತ್ತ  ಸರ್ಕಾರ, ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.

                        

                          

                        

                          

 

Leave a Reply

Your email address will not be published. Required fields are marked *