
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು ನಾಳೆಯಿಂದ ಜುಲೈ 29ರವರೆಗೆ ಆಯಾ ಭಾಗದ ಬೂತ್ ಮಟ್ಟದ ಅಧಿಕಾರಿಗಳು ನಿಮ್ಮ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ಬಾರಿ ನಕಲಿ ಮತದಾರರನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಆಯೋಗವು ಪ್ರತಿಯೊಬ್ಬ ಮತದಾರರ ‘ಪ್ರೊಜೆನಿ ಮ್ಯಾಪಿಂಗ್’ (ಕುಟುಂಬದ ವಂಶಾವಳಿ ಆಧಾರಿತ ಮ್ಯಾಪಿಂಗ್) ತಂತ್ರಜ್ಞಾನವನ್ನು ಬಳಸುತ್ತಿದೆ. ಸಮೀಕ್ಷೆಯ ವೇಳೆ ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ವಿವರಗಳ ಹೊಂದಾಣಿಕೆಯನ್ನು ಕಡ್ಡಾಯಗೊಳಿಸಲಾಗಿದೆ.
ಮನೆಗೆ ಭೇಟಿ ನೀಡುವ ಅಧಿಕಾರಿಗಳು ನಿಗದಿತ ನಮೂನೆಗಳನ್ನು ನೀಡಿ ಭರ್ತಿ ಮಾಡಿಸಿಕೊಂಡು ವಾಪಸ್ ಪಡೆದುಕೊಳ್ಳುತ್ತಾರೆ. ಹೊಸ ಹೆಸರುಗಳ ಸೇರ್ಪಡೆ ಮಾಡಿ, ನಿಧನರಾದವರು, ಮನೆ ಖಾಲಿ ಮಾಡಿದವರ ಹೆಸರನ್ನು ಮತಪಟ್ಟಿಯಿಂದ ಕೈಬಿಟ್ಟು ಪರಿಷ್ಕರಣೆ ಮಾಡಲಾಗುತ್ತದೆ. ಎರಡೆರೆಡು ಕಡೆ ಹೆಸರು ಇದ್ದಲ್ಲಿ ಒಂದು ಕಡೆ ಮಾತ್ರ ಉಳಿಸುವ ಪ್ರಕ್ರಿಯೆ ನಡೆಯುತ್ತದೆ. ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಕೂಡ ಅವಕಾಶವಿದೆ.
ಎಸ್‌ಐಆರ್ ಪ್ರಕ್ರಿಯೆಗಾಗಿ ರಾಜ್ಯಾದ್ಯಂತ ಒಟ್ಟು 59,050ಕ್ಕೂ ಹೆಚ್ಚು ಮತಗಟ್ಟೆ ಮಟ್ಟದ ಅಧಿಕಾರಿಗಳು ತೊಡಗಿಸಿಕೊಳ್ಳಲಿದ್ದಾರೆ. 2026ರ ಮೇ 12ರ ವರೆಗಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದ ಒಟ್ಟು 5,55,74,064 ಮತದಾರರನ್ನು ಈ ವಿಶೇಷ ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ. ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ರಾಜಕೀಯ ಪಕ್ಷಗಳ ಏಜೆಂಟರು ನೆರವಾಗಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬಿಎಲ್‌ಒಗಳು ಗಣತಿ ನಮೂನೆಗಳನ್ನು ಪಡೆದುಕೊಂಡ ನಂತರ, ಅವುಗಳನ್ನು ಪರಿಶೀಲಿಸಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ವಿವರ ತಪ್ಪಾಗಿದ್ದರೆ, ಆಕ್ಷೇಪಣೆ ಸಲ್ಲಿಸಬಹುದು. ಅದನ್ನು ಪರಿಶೀಲಿಸಿ, ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಬಿಟ್ಟುಹೋಗಿದ್ದರೆ ಮತದಾರರು ಜಿಲ್ಲಾಧಿಕಾರಿ ಹಂತದ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು. ನಂತರದ ಹಂತದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.



.
.
.
.
.
.
.
.
.
.
.
.
.
.
.
.
.
.
.
.
