
ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತ್ತಂಗಡಿ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹೆದ್ದಾರಿ ಇಲಾಖೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಬಸ್ಸು ನಿಲ್ದಾಣಗಳನ್ನು ಕೆಡವಿ ಹಾಕಿದ್ದರು. ಹೊಸ ಬಸ್ಸು ನಿಲ್ದಾಣ ಆಗುವವರೆಗೆ ಕನಿಷ್ಠ ತಾತ್ಕಾಲಿಕ ಬಸ್ಸು ನಿಲ್ದಾಣಗಳನ್ನು ಕೂಡ ನಿರ್ಮಾಣ ಮಾಡಿಲ್ಲ. ಇದರಿಂದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆ ಮಧ್ಯದಲ್ಲಿ ಬಸ್ಸು ಕಾಯಬೇಕಾದ ಸ್ಥಿತಿ ಎದುರಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಸಿಗೆಯಲ್ಲಿ ಪ್ರಖರ ಬಿಸಿಲಿಗೆ ಹಾಗೂ ಮಳೆಗಾಲದಲ್ಲಿ ಗಾಳಿ ಮಳೆಗೆ ಬಸ್ಸಿಗಾಗಿ ಕಾಯುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳ ಬೇಜಾಬ್ದಾರಿತನಕ್ಕೆ ಸಾಣೂರಿನ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.
ಈ ಕುರಿತು ಹಲವು ಬಾರಿ ಶಾಸಕರು ,ಸಂಸದರು, ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಇದೀಗ ಸಾಣೂರಿನ ಜನತೆ ಸಂಬಂಧಪಟ್ಟವರ ನಿರ್ಲಕ್ಷ್ಯತನಕ್ಕೆ ಬೇಸತ್ತು ಭಾರೀ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಒಂದು ವಾರದೊಳಗೆ ಹೊಸ ಬಸ್ಸು ನಿಲ್ದಾಣಕ್ಕೆ ಸ್ಥಳ ಗುರುತಿಸಿ ನಿರ್ಮಾಣ ಕಾರ್ಯ ಆರಂಭಿಸದಿದ್ದರೆ ಸಾಣೂರು ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಊರಿನ ಎಲ್ಲಾ ಸಂಘ-ಸಂಸ್ಥೆಗಳು, ಹೆದ್ದಾರಿ ಹೋರಾಟ ಸಮಿತಿ ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಣೂರು ನರಸಿಂಹ ಕಾಮತ್ ಎಚ್ಚರಿಸಿದ್ದಾರೆ.




