
ಉಡುಪಿ, ಡಿ.22: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ್ದ ಆರೋಪದಲ್ಲಿ ಮಲ್ಪೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಗುಜರಾತ್ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34) ಎಂದು ಗುರುತಿಸಲಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂಬ ಇಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದರು. ಇವರಿಬ್ಬರೂ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.ಹಿರೇಂದ್ರ ಹಣ ಪಡೆದು ರೋಹಿತ್ ಹಾಗೂ ಸಂತ್ರಿಗೆ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಒದಗಿಸಿದ್ದ. ಆ ಸಿಮ್‌ಗಳ ಮೂಲಕ ಇಬ್ಬರೂ ಪಾಕಿಸ್ತಾನದಲ್ಲಿರುವ ವ್ಯಕ್ತಿಗಳಿಗೆ ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಗಳನ್ನು ರವಾನಿಸುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಹಡಗುಗಳ ಸಂಖ್ಯೆ, ಚಲನವಲನ ಹಾಗೂ ಇತರೆ ರಹಸ್ಯ ವಿವರಗಳನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಶಿಪ್ ಯಾರ್ಡ್ ಅಧಿಕಾರಿಗಳು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಬಂಧಿತ ಆರೋಪಿಗಳಾದ ರೋಹಿತ್ ಮತ್ತು ಸಂತ್ರಿ ‘ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್’ ಮೂಲಕ ಗುತ್ತಿಗೆ ಆಧಾರದಲ್ಲಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು ಸುಮಾರು ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸ್‌ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿದೆ.
ದೇಶದ ಭದ್ರತೆಗೆ ಆತಂಕ ಉಂಟುಮಾಡಿರುವ ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಶಾಮೀಗಿರುವ ಶಂಕೆ ವ್ಯಕ್ತವಾಗಿದ್ದು, ಮಲ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
.
.
