
ಸಿದ್ದರಾಮಯ್ಯ ಪರ ಒಂದಿಷ್ಟು ಶಾಸಕರು, ಸಚಿವರು ಬ್ಯಾಟಿಂಗ್ ಮಾಡುತ್ತಿದ್ದರೆ, ಅತ್ತ ಡಿಕೆ ಶಿವಕುಮಾರ್ ಸಿಎಂ ಎಂದು ಒಂದಿಷ್ಟು ಶಾಸಕರು ಘೋಷಣೆ ಮೊಳಗಿಸುತ್ತಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಮತ್ತು ಡಿಸಿಎಂ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ವರದಿ ಸಲ್ಲಿಸಿದ್ದು, ಸಂಪುಟ ಪುನಾರಚನೆ ಮುನ್ನೆಲೆಗೆ ಬಂದಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆಗಳು ಎದ್ದಿವೆ. ಹೀಗೆ ಕಾಂಗ್ರೆಸ್ ಪಾಳೆಯದಲ್ಲಿ ಸರಣಿ ಸಭೆ, ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಆಡಿದ ಮಾತು ಭಾರಿ ಪ್ರಾಮುಖ್ಯತೆ ಪಡೆದುಕೊಂಡಿದೆ.
ಸೋನಿಯಾ ಗಾಂಧಿ ಅವರು ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ತ್ಯಾಗ ಮಾಡಿದ್ದಾರೆ, ನಾವು ಕೂಡಾ ಅದೇ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಪರಿವರ್ತನೆಯನ್ನ ಬಯಸುತ್ತದೆ. ಬಿಜೆಪಿಯವರು ಯಥಾ ಸ್ಥಿತಿಯನ್ನ ಬಯಸತಕ್ಕಂತವರು. ಜೆಡಿಎಸ್ ನವರಿಗೆ ಯಾವುದೇ ಸಿದ್ಧಾಂತ ಇಲ್ಲ. ಅಗತ್ಯ ಸಂದರ್ಭದಲ್ಲಿ ತ್ಯಾಗಕ್ಕೆ ಸಿದ್ದ ಎಂಬ ಸಂದೇಶದ ಮೂಲಕ ವಿರೋಧಿ ಬಣಕ್ಕೂ ಸಂದೇಶವನ್ನು ರವಾನೆ ಮಾಡಿದ್ದಾರೆ. ತ್ಯಾಗದ ವಿಚಾರದಲ್ಲಿ ಮಾರ್ಮಿಕ ಮಾತನಾಡಿ ಅವರವರ ಲೆಕ್ಕಾಚಾರದ ಪ್ರಕಾರ ಅರ್ಥೈಸಿಕೊಳ್ಳುವಂತೆ ಮಾಡಿ ಸಿದ್ದರಾಮಯ್ಯ ಈಗ ಹೊಸ ಚರ್ಚೆ ಹುಟ್ಟುಹಾಕಿದ್ದು, ಕಾಂಗ್ರೆಸ್ ನಲ್ಲಿ ಭಾರೀ ಸಂಚಲನ ಮೂಡಿಸಿದೆ.