ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿ ಫಲಿತಾಂಶದಲ್ಲಿ ಗಣನೀಯ ಕುಸಿತ ಕಂಡಿದ್ದು,ರಾಜ್ಯದಲ್ಲಿ ಒಟ್ಟಾರೆ ಶೇ, 76.91 ರಷ್ಟು ಫಲಿತಾಂಶ ದಾಖಲಾಗಿದೆ.
ನೀರಿಕ್ಷೆಯಂತೆ ಈ ಬಾರಿ ಉಡುಪಿ ಜಿಲ್ಲೆ ಶೇ 94ರ ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು,ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದಿದೆ.
ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ಅಂಕಿತಾ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು.
