ಬೆಂಗಳೂರು: ನೀಟ್‌ನಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗುತ್ತಿರುವುದರಿಂದ ಕರ್ನಾಟವೂ ತಮಿಳುನಾಡು ಮಾದರಿಯನ್ನು ಅನುಸರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಪರೀಕ್ಷೆಯಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಇತ್ತೀಚೆಗಷ್ಟೆ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದೀಗ ನೀಟ್ ವಿರುದ್ಧ ತಮಿಳುನಾಡು ಮಾದರಿ ಅನುಸರಿಸುವುದಾಗಿ ಹೇಳಿಕೆ ನೀಡಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳು ದೊರೆಯಬೇಕು ಎನ್ನುವ ದೃಷ್ಟಿಯಿಂದ ತಮಿಳುನಾಡು ಸರ್ಕಾರ ನಿರಂತರವಾಗಿ ನೀಟ್ ವಿರೋಧಿಸುತ್ತಲೇ ಬರುತ್ತಿದೆ. ಇದೇ ಹಾದಿಯನ್ನು ಕರ್ನಾಟಕವೂ ಅನುಸರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಂಭೀರವಾಗಿ ಈ ವಿಚಾರ ಚರ್ಚಿಸಲಾಗುವುದು. ಈ ಬಗ್ಗೆ ಇಡೀ ರಾಷ್ಟ್ರಮಟ್ಟದಲ್ಲಿ ಕೂಡ ಚರ್ಚೆಯಾಗಬೇಕು ಎಂದರು. ನೀಟ್ ಅಕ್ರಮದ ಬಗ್ಗೆ ಕೇಂದ್ರ ಸಚಿವರೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಬಾರಿ ನಡೆಸಿರುವ ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳಿಗೂ ಮರು ಪರೀಕ್ಷೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳು ದೊರೆಯಬೇಕು ಎನ್ನುವ ದೃಷ್ಟಿಯಿಂದ ತಮಿಳುನಾಡು ಸರ್ಕಾರ ನೀಟ್ ರದ್ದತಿಗೆ ನಿರ್ಣಯ ಕೈಗೊಂಡಿದೆ. ಇದೇ ಹಾದಿಯನ್ನು ಕರ್ನಾಟಕವೂ ಅನುಸರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.