ಕಲಬುರಗಿ: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿನ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ.
ರಾಜ್ಯ ಸರ್ಕಾರದ ಈ ಆದೇಶದ ವಿರುದ್ದ 16 ಜನ ಅರ್ಜಿದಾರರು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಜನೌಷಧಿ ಕೇಂದ್ರ ಸ್ಥಾಪನೆಗೆ ಮೂಲಸೌಕರ್ಯ ಕಲ್ಪಿಸಲು ಸಾಕಷ್ಟು ಖರ್ಚು ತಗುಲುತ್ತಿದ್ದು ಹಾಗೂ ಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿಗಳು ಕೈತಪ್ಪುತ್ತದೆ ಎಂಬ ಅರ್ಜಿದಾರರ ಮನವಿಯ ಹಿನ್ನಲೆಯಲ್ಲಿ ಹೈಕೋರ್ಟ್ ಇದೀಗ ಮಧ್ಯಂತರ ಆದೇಶ ತಡೆ ನೀಡಿದೆ. ಜನರಿಗೆ ಶೇಕಡ 50 ರಿಂದ 96 ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ನಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ ಎಂದು ಅರ್ಹೀದಾರರ ಪರ ವಕೀಲರು ವಾದಿಸಿದ್ದಾರೆ. ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ರಾಜ್ಯ ಸರ್ಕಾರದ ಆದೇಶಕ್ಕೆ ಕಲಬುರ್ಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.