ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಇಂದು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ಸಿಎಂ ಜೊತೆ ಸಚಿವರ ಸಭೆಯಲ್ಲಿ ತೀರ್ಮಾನ ಮಾಡಿ, ಕ್ಯಾಬಿನೆಟ್ ಮೀಟಿಂಗ್ ರದ್ದುಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಂಜೆ 5 ಗಂಟೆಗೆ ತುರ್ತು ಸಂಪುಟ ಸಭೆ ಕರೆಯಲಾಗಿತ್ತು, ಎಲ್ಲಾ ಸಚಿವರಿಗೆ ಸಂಪುಟ ಸಭೆಗೆ ಬರಲು ಸೂಚನೆ ಕೂಡ ನೀಡಲಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ಇರುವ ಸಚಿವರು ಕೂಡ ತಕ್ಷಣವೇ ಬರುವಂತೆ ಕೂಡ ಸೂಚನೆ ನೀಡಲಾಗಿತ್ತು. ಆದರೆ ಈಗ ಸಭೆ ರದ್ಧಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರದಲ್ಲಿ ಅಕ್ರಮವಾಗಿ 14 ಸೈಟ್ ಪಡೆದುಕೊಂಡ ಆರೋಪದ ಮೇಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಎನ್ನುವವರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮೂರು ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ಕೂಡ ನೀಡಿದ್ದಾರೆ.
ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ sec 218 ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್ ಗೆ ಅನುಮತಿ ನೀಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕಾನೂನು ಸಲಹೆಗಾರ ಪೊನ್ನಣ್ಣ ಆಗಮಿಸಿದ್ದಾರೆ.
`